ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಒಂದರಂತೆ 31 ಗೋಶಾಲೆ ಮತ್ತು ಹೆಚ್ಚುವರಿಯಾಗಿ 69 ಗೋಶಾಲೆಗಳು ಸೇರಿದಂತೆ ಒಟ್ಟು 100 ಗೋಶಾಲೆಗಳನ್ನು ಈ ವರ್ಷದ ಅಂತ್ಯದೊಳಗೆ ನಿರ್ಮಾಣ ಮಾಡಲಾಗುತ್ತದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.
ಗೋಶಾಲೆ ನಿರ್ಮಾಣ ಪಂಚವಾರ್ಷಿಕ ಯೋಜನೆಯೇ ..? ಎಂದು ರಾಜ್ಯ ಸರಕಾರವನ್ನು ಕಟುವಾಗಿ ಈ ಹಿಂದಿನ ವಿಚಾರಣೆ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ಪೀಠ ಪ್ರಶ್ನಿಸಿದ್ದರಿಂದ ಸರಕಾರ ಗೋಶಾಲೆಗಳನ್ನು ಯಾವ ಯಾವ ಜಿಲ್ಲೆಗಳಲ್ಲಿ ಯಾವ ತಿಂಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಪ್ರಮಾಣ ಪತ್ರ ಸಲ್ಲಿಸಿ ವೇಳಾಪಟ್ಟಿಯ ವಿವರ ನೀಡಿದೆ.
ರಾಜ್ಯದ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು. ಹಾಲಿ ಇರುವ ಗೋಶಾಲೆಗಳಿಗೆ ಮೇವು, ನೀರು ಮತ್ತು ಜಾಗ ಒದಗಿಸಲು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕೋರಿ ಹೈಕೋರ್ಟ್ನ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿತು.
ಈ ವೇಳೆ, ಸರಕಾರ ಗೋಶಾಲೆ ನಿರ್ಮಾಣಕ್ಕೆ ಬದ್ಧತೆ ಇರುವುದನ್ನು ಸ್ಪಷ್ಟಪಡಿಸಿತು.ರಾಜ್ಯ ಸರಕಾರದ ಪಶು ಸಂಗೋಪನೆ ಇಲಾಖೆ 2019ರಲ್ಲಿ ನಡೆಸಿದ ಜಾನುವಾರು ಗಣತಿ ಪ್ರಕಾರ ರಾಜ್ಯದಲ್ಲಿ 77,075 ಬಿಡಾಡಿ ದನಗಳಿವೆ.
ಇವುಗಳ ನಿರ್ವಹಣೆಗೆ ಪ್ರತಿ ಜಿಲ್ಲೆಗೊಂದು ಗೋಶಾಲೆ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. 2021-22ನೇ ಸಾಲಿನ ಬಜೆಟ್‌ನಲ್ಲಿ ಪ್ರತಿ ಜಿಲ್ಲೆಗೊಂದು ಗೋಶಾಲೆ ಸ್ಥಾಪಿಸುವುದಾಗಿ ಘೋಷಿಸಲಾಗಿತ್ತು. ಅದಕ್ಕಾಗಿ 15 ಕೋಟಿ ರೂಪಾಯಿ ಅನುದಾನ ಸಹ ಮೀಸಲಿಡಲಾಗಿದೆ ಎಂದು ಕೋರ್ಟ್ಗೆ ಸ್ಪಷ್ಟನೆ ನೀಡಲಾಗಿದೆ.