ಬಂಟ್ವಾಳ: ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ದಸ್ತಗಿರಿ ಮಾಡುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಪುತ್ತೂರು ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್ ಶರೀಫ್(೪೪) ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ನ್ಯಾಯಂಗ ಬಂಧನ ವಿಧಿಸಿದೆ. ಬಂಟ್ವಾಳ ಗ್ರಾಮಾಂತರ ಠಾಣೆಗೆ ಸಂಬಂಧಿಸಿ 2004ರ ನವೆಂಬರ್ 7ರಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಕಳ್ಳತನ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡ್ಡಿದ್ದನು.
ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಹಲವಾರು ವಿಳಾಸ, ಬದಲಾವಣೆ ಮಾಡಿಕೊಂಡು ಬಂಧನಕ್ಕೆ ಸಿಗದೇ ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪುತ್ತಿಗೆ ಎಂಬಲ್ಲಿ ವಾಸವಾಗಿದ್ದನು. ಮೊಹಮ್ಮದ್ ಶರೀಫ್ ಇತ್ತೀಚಿಗೆ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ದಸ್ತಗಿರಿ ಆಗಿ ಇತ್ತೀಚಿಗೆ ಜಾಮೀನಿನ ಮೇಲೆ ಬಿಡುಗಡೆ ಆಗಿರುತ್ತಾನೆ.
ಈ ಕಾರ್ಯಚರಣೆಯನ್ನು ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕ ಶಿವಕುಮಾರ್ ಅವರ ನೇತೃತ್ವದಲ್ಲಿ ಪಿಎಸ್‌ಐಗಳಾದ ಹರೀಶ್ ಎಂ ಆರ್ ಮತ್ತು ಮೂರ್ತಿ ಹಾಗೂ ಸಿಬ್ಬಂದಿಯವರಾದ ಹರಿಶ್ಚಂದ್ರ ಮತ್ತು ಗಣೇಶ ಅವರು ಕಾರ್ಯಚರಣೆ ನಡೆಸಿದ್ದರು.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.