ದಾವಣಗೆರೆ: ಇಲ್ಲಿನ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ಬೆಳ್ಳಂಬೆಳಿಗ್ಗೆ ನಡೆದಿದೆ.
ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಮೃತರ ಕುರಿತು ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.
ಮೃತರು ಶಹಾಪುರದವರಾಗಿದ್ದು, ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಎಸ್ಪಿ ಸಿ.ಬಿ.ರೈಷ್ಯಂತ್ ಮತ್ತು ಅವರ ತಂಡ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.