ಬೆಂಗಳೂರು: ರಾಜ್ಯದಲ್ಲಿರುವ ಚರ್ಚ್ ಗಳ ಸಮೀಕ್ಷೆ ನಡೆಸುವಂತೆ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯ ಜುಲೈ 7ರಂದು ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾ, ಸಚಿನ್ ಶಂಕರ್ ಮಗದಂ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ರಾಜ್ಯದಲ್ಲಿನ ಚರ್ಚ್ ಗಳ ಮಾಹಿತಿ ಸಂಗ್ರಹಿಸುವುದನ್ನು ಕಿರುಕುಳ ಎನ್ನಲಾಗದು ಎಂದಿರುವ ಹೈಕೋರ್ಟ್ ಸಮೀಕ್ಷೆ ನಡೆಸದಂತೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂಬ ಅರ್ಜಿದಾರರ ಮನವಿಯನ್ನು ಈ ಹಂತದಲ್ಲಿ ಪರಿಗಣಿಸಲಾಗದು ಎಂದಿದೆ.
ಈ ವೇಳೆ ಅರ್ಜಿದಾರರ ಪರ ವಕೀಲ ಪ್ರೊ. ರವಿವರ್ಮ ಕುಮಾರ್ ವಾದಿಸಿ, ಚರ್ಚ್ ಗಳ ಸಮೀಕ್ಷೆ ಹೆಸರಲ್ಲಿ ರಾಜ್ಯ ಸರ್ಕಾರ ಕ್ರಿಶ್ಚಿಯನ್ನರಿಗೆ ಕಿರುಕುಳ ನೀಡುತ್ತಿದೆ.
ಧರ್ಮದ ಆಧಾರದಲ್ಲಿ ಕ್ರೈಸ್ತರಿಗೆ ತಾರತಮ್ಯ ಎಸಗುತ್ತಿದೆ. ಇದು ಧಾರ್ಮಿಕ ಹಕ್ಕಿನ ಉಲ್ಲಂಘನೆಯಷ್ಟೇ ಅಲ್ಲ, ಸಂವಿಧಾನದ ವಿಧಿ 14 ಹಾಗೂ 21ರ ಸಮಾನತೆ ಮತ್ತು ಖಾಸಗಿತನದ ಹಕ್ಕನ್ನು ಕಸಿದುಕೊಳ್ಳುತ್ತದೆ.
ಶಾಸಕರೊಬ್ಬರ ಮನವಿಯಂತೆ ಸರ್ಕಾರ ಚರ್ಚ್ ಗಳ ಸಮೀಕ್ಷೆಗೆ ಮುಂದಾಗಿದೆ. ರಾಜ್ಯ ಸರ್ಕಾರದ ಈ ಸಂವಿಧಾನ ಬಾಹಿರ ಕೃತ್ಯವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಮಾಹಿತಿ ಸಂಗ್ರಹಿಸಿದಾಕ್ಷಣ ಕಿರುಕುಳ ನೀಡಲಾಗುತ್ತಿದೆ ಎನ್ನಲಾಗದು ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ, ಅರ್ಜಿ ಆಕ್ಷೇಪಣೆ ಸಲ್ಲಿಸಿದ ನಂತರ ತಡೆಯಾಜ್ಞೆ ಕೋರಿಕೆ ವಿಚಾರಣೆ ನಡೆಸುವುದಾಗಿ ತಿಳಿಸಿ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ದೇಶಕರಿಗೆ ನೋಟಿಸ್ ಮಾಡಿತು. ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ, ವಿಚಾರಣೆ ಮುಂದೂಡಿತು.
ಅರ್ಜಿದಾರರ ಕೋರಿಕೆ 2021 ಜುಲೈ 7ರಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿ ರಾಜ್ಯದಲ್ಲಿ ಚರ್ಚ್ ಗಳು ಇರುವ ಸ್ಥಳ, ಹೆಸರು, ವಿಳಾಸ, ಖಾತೆ ಸಂಖ್ಯೆ, ಸರ್ವೇ ಸಂಖ್ಯೆ ಹಾಗೂ ಪಾದ್ರಿಗಳ ವಿವರಗಳನ್ನು ಸಂಗ್ರಹಿಸಲು ಸೂಚಿಸಿದೆ.
ಆದರೆ, ಯಾವ ಕಾರಣಕ್ಕೆ ಈ ಎಲ್ಲ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂಬುದನ್ನು ತಿಳಿಸಿಲ್ಲ. ಅಲ್ಪಸಂಖ್ಯಾತರ ವರ್ಗಕ್ಕೆ ಬರುವ ಇತರೆಲ್ಲ ಸಮುದಾಯಗಳನ್ನು ಬಿಟ್ಟು ಕೇವಲ ಚರ್ಚ್ ಗಳ ಮಾಹಿತಿ ಸಂಗ್ರಹಿಸುತ್ತಿರುವುದು ಅರ್ಥಹೀನ ಮತ್ತು ತಾರತಮ್ಯದಿಂದ ಕೂಡಿದೆ.
ಆದ್ದರಿಂದ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಪತ್ರ ಆಧರಿಸಿ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರ ಹಾಗೂ ಇತರ ಪ್ರತಿವಾದಿಗಳಿಗೆ ನಿರ್ದೇಶಿಸಬೇಕು.
ಪುಟ್ಟಸ್ವಾಮಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ರೂಪಿಸಿರುವ ಮಾರ್ಗಸೂಚಿಗಳ ಅನುಸಾರ ಈಗಾಗಲೇ ಸಂಗ್ರಹಿಸಿರುವ ದತ್ತಾಂಶಗಳನ್ನು ಸಂರಕ್ಷಿಸಿಡಲು ನಿರ್ದೇಶಿಸಬೇಕು. ಸುತ್ತೋಲೆ ಸಂವಿಧಾನಬಾಹಿರ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.