ಸಿಎಂ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ..!
ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದಾಶಿವನಗರ ಪೊಲೀಸರು ಭೇಟಿ ನೀಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ಶುಕ್ರವಾರ ರಾತ್ರಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ನಿದ್ರೆ ಮಾತ್ರೆಯನ್ನು ಸೇವಿಸಿರುವ ಎನ್. ಆರ್. ಸಂತೋಷ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.
ಎಂ. ಎಸ್. ರಾಮಯ್ಯ ಆಸ್ಪತ್ರೆಯ ವೈದ್ಯರು ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ. ಎನ್. ಆರ್. ಸಂತೋಷ್ ಹಲವು ವರ್ಷಗಳಿಂದ ಯಡಿಯೂರಪ್ಪ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.
2020ರ ಮೇ 28ರಂದು ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಶುಕ್ರವಾರ ಸಂಜೆ 7.30ರ ಸುಮಾರಿಗೆ ಡಾಲರ್ಸ್ ಕಾಲೋನಿಯ ಮನೆಯಲ್ಲಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮೊದಲ ಮಹಡಿಯಲ್ಲಿರುವ ಕೊಠಡಿಯಲ್ಲಿ ಅವರು ಪುಸ್ತಕ ಓದುತ್ತಿದ್ದರು. ಅಲ್ಲಿಯೇ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ರಾತ್ರಿ 8 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದಾಶಿವ ನಗರ ಪೊಲೀಸರು ಮನೆಗೆ ಸಹ ಭೇಟಿ ನೀಡಿದ್ದು, ಡೆತ್ ನೋಟ್ ಬರೆದಿದ್ದಾರೆಯೇ? ಎಂದು ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.