ದ.ಕ. ಜಿಲ್ಲೆಯಲ್ಲಿ ವಲಸೆ ಪರ್ವ..! ‘ಕೈ’ ಕೊಟ್ಟು ‘ಕಮಲ’ ಹಿಡಿದ ನಾಯಕರು- ಕಾರ್ಯಕರ್ತರು..!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರ ವಲಸೆ ಪರ್ವ ಮತ್ತೆ ಆರಂಭವಾಗಿದೆ. ಸ್ಥಳಿಯ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿರುವ ಕಾಲಘಟ್ಟದಲ್ಲೇ ಕೈ ನಾಯಕರ ಮತ್ತು ಕಾರ್ಯಕರ್ತರ ವಲಸೆ ಕಾಂಗ್ರೆಸ್ ಗೆ ತಲೆ ನೋವು ತರಿಸಿದೆ.
ಇಂದು ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ದ.ಕ ಜಿಲ್ಲಾ ಪಂಚಾಯತ್ ಸದಸ್ಯೆ ಕಾಂಗ್ರೆಸ್ ನ ಮಂಜುಳಾ ಮಾಧವ ಮಾವೆ, ಹಾಗೂ ಮಂಜುಳಾ ಪತಿ ಮಾಧವ ಮಾವೆ, ಕೆದಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸುದರ್ಶನ್ ಸಹಿತ ಅನೇಕ ಕಾಂಗ್ರೆಸ್ ನಾಯಕರುಗಳು ಮತ್ತು ಕಾರ್ಯಕರ್ತರುಗಳು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಿದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಸೇರಿದಂತೆ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಇನ್ನು ಇದಕ್ಕೂ ಮುನ್ನ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ಮಾತನಾಡಿದರು. ಕಳೆದ ಬಾರಿ ಕಾಂಗ್ರೆಸ್ ಸರಕಾರವೇ ಮಾಡಿದ ಮೀಸಲಾತಿಯಲ್ಲಿ ಬಿಜೆಪಿ ಗೆದ್ದು ಬೀಗಿದೆ ಎಂದು ಹೇಳುವ ಮೂಲಕ ಮಾಜಿ ಸಚಿವ ರಮಾನಾಥ್ ರೈಗೆ ಟಾಂಗ್ ನೀಡಿದ್ದಾರೆ.
ಅಭ್ಯರ್ಥಿಗಳ ಮೀಸಲಾತಿಯಲ್ಲಿ ಮೂಗು ತೂರಿಸುವ ಅವಶ್ಯಕತೆ ನಮಗೆ ಇಲ್ಲ.ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಇಲ್ಲದಿದ್ದರೂ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಇದರಿಂದ ಕಾಂಗ್ರೆಸ್ ಗೆ ಭವಿಷ್ಯ ಇಲ್ಲದಂತಹ ಪರಿಸ್ಥಿತಿ ಉಂಟಾಗಿದೆ.ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲ ಎಂದು ಲೇವಡಿ ಮಾಡಿದರು.