ಹುಬ್ಬಳ್ಳಿ : ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಕಂಡುಬಂದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡು ನೂರಾರು ಜನರು ಠಾಣೆಯ ಎದುರು ಜಮಾಯಿಸಿ ಕಲ್ಲು ತೂರಾಟ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡುಹಾರಿಸಿದ್ದಾರೆ. ಸದ್ಯದ ಮಟ್ಟಿಗೆ ಹುಬ್ಬಳ್ಳಿ ನಗರ ಬೂದಿಮುಚ್ಚಿದ ಕೆಂಡದಂತಿದೆ. ಹಿಂಸಾಚಾರದಲ್ಲಿ ಇನ್ಸ್ಪೆಕ್ಟರ್ ಸೇರಿದಂತೆ ಏಳೆಂಟು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ.
ಕಿಡಿಗೇಡಿಗಳು ಪೊಲೀಸರನ್ನೇ ಗುರಿಯಾಗಿಸಿ ದಾಳಿ ಮಾಡಿದ್ದರು. ಈ ವೇಳೆ 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿದ್ದವು. ಫೋಟೊವೊಂದನ್ನು ಎಡಿಟ್ ಮಾಡಿ ಧಾರ್ಮಿಕ ಕೇಂದ್ರಕ್ಕೆ ಅವಮಾನ ಉಂಟು ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಗಲಭೆಗೆ ಕಾರಣವಾಗಿದೆ.
30ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಿದ್ದಾರೆ. ಕಿಡಿಗೇಡಿಗಳು ಕಲ್ಲು ತೂರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ದೃಶ್ಯ ಆಧರಿಸಿ ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ವಿವಾದಿತ ಪೋಸ್ಟ್ ಮಾಡಿ ಗಲಭೆ ಸೃಷ್ಠಿಸಿದ ಆರೋಪಿ ಅಭಿಷೇಕ್ ಹಿರೇಮಠ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಎದುರು ಬಿಗಿ ಬಂದೋಬಸ್ತ್ ಹಾಕಲಾಗಿದೆ. ಹುಬ್ಬಳ್ಳಿ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನೆಲೆಗೊಂಡಿರುವ ಹಿನ್ನೆಲೆಯಲ್ಲಿ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.