HomeLATEST NEWSಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ ಆರೋಪ: ಸಂಸದ ನಳಿನ್‌ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಿದ ಹೈಕೋರ್ಟ್‌

ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ ಆರೋಪ: ಸಂಸದ ನಳಿನ್‌ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕದ್ರಿ ಪೂರ್ವ ಠಾಣೆ ಪೊಲೀಸರು ದಾಖಲಿಸಿದ್ದ ಎಫ್ಐ‌ಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.


ಈ ಬಗ್ಗೆ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ನಿನ್ನೆ ವಿಚಾರಣೆ ನಡೆಸಿ, ಮಂಗಳೂರು 2ನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆಯನ್ನು ರದ್ದುಪಡಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಎಚ್‌. ಪವನಚಂದ್ರ ಶೆಟ್ಟಿ, ‘ಸಂಸದರು ಜನರನ್ನು ಪ್ರಚೋದಿಸುವ ಅಥವಾ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಉದ್ದೇಶ ಹೊಂದಿರಲಿಲ್ಲ. ಅವರು ತಮ್ಮ ಕರ್ತವ್ಯ ನಿಭಾಯಿಸಿದ್ದಾರೆ.

ಸಂವಿಧಾನದ 105ನೇ ವಿಧಿಯ ಅನುಸಾರ ಅಧಿಕಾರಿಗಳು ತಪ್ಪು ಮಾಡುತ್ತಿದ್ದಾರೆ ಎಂದು ಗೊತ್ತಾದಾಗ ಜನಪ್ರತಿನಿಧಿಗಳು ಮಧ್ಯಪ್ರವೇಶಿಸುವ ಅಧಿಕಾರ ಹೊಂದಿದ್ದಾರೆ. ಅಂತೆಯೇ, ಈ ಪ್ರಕರಣದಲ್ಲಿ ಆರೋಪ ರುಜುವಾತುಪಡಿಸುವಂತಹ ಅಂಶಗಳೇ ಇಲ್ಲ. ಆದ್ದರಿಂದ, ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿದ್ದರು.
ಪ್ರಕರಣ ಹಿನ್ನೆಲೆಯೇನು?
‘ರಾಜ್ಯದಲ್ಲಿ ಕೋಮುಗಲಭೆ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ 2017ರ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲು ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರನ್ನು ಮಂಗಳೂರು ಪೂರ್ವ ಠಾಣಾ ಇನ್ಸ್‌ಪೆಕ್ಟರ್ ಬಂಧಿಸಿದ್ದರು.

ಈ ಬಗ್ಗೆ ಮಾಹಿತಿ ಪಡೆದಿದ್ದ ನಳೀನ್ ಕುಮಾರ್ ಕಟೀಲ್, ತಕ್ಷಣವೇ ಠಾಣೆಗೆ ತೆರಳಿ ಕಾರ್ಯಕರ್ತರ ಬಂಧನದ ಕುರಿತ ಡೈರಿಯನ್ನು ತೋರಿಸುವಂತೆ ಇನ್‌ಸ್ಪೆಕ್ಟರ್ ಅವರನ್ನು ಕೇಳಿದ್ದರು. ಇದಕ್ಕೆ ಪ್ರತಿಯಾಗಿ ಪೊಲೀಸ್ ಇನ್‌ಸ್ಪೆಕ್ಟರ್ ಮಾರುತಿ ಜಿ. ನಾಯಕ್, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದಡಿ ಕಟೀಲ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣಾಧಿಕಾರಿಗೆ ದೂರು ನೀಡಿದ್ದರು.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...