ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಇಲ್ಲಿನ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ ಕಾಡಾನೆಯೊಂದು ದಾಳಿ ನಡೆಸಿದ್ದು ವ್ಯಕ್ತಿಯೊಬ್ಬರ ತಲೆ ಮತ್ತು ಸೊಂಟಕ್ಕೆ ಗಂಭೀರ ಗಾಯವಾಗಿದೆ.
ಗಾಯಗೊಂಡ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ರೇವಪ್ಪ ಎಂದು ಗುರುತಿಸಲಾಗಿದೆ. ಇವರು ಅರಣ್ಯ ಇಲಾಖೆಯಲ್ಲಿ ನೆಡುತೋಪುಗಳಲ್ಲಿ ಗಿಡ ನೆಡುವ ಕೆಲಸ ಮಾಡುತ್ತಿದ್ದರು.
ಈ ಭಾಗದಲ್ಲಿ ಇತ್ತೀಚಿಗೆ ಕೃಷಿ ಜಾಗಕ್ಕೆ ಕಾಡಾನೆ ದಾಳಿ ನಡೆಸುತ್ತಿದ್ದು, ಅರಣ್ಯ ಇಲಾಖೆಗೆ ಇದರ ಬಗ್ಗೆ ಅನೇಕ ಬಾರಿ ದೂರು ಸಲ್ಲಿಸಿದ್ದರೂ ಕಾಡಾನೆ ದಾಳಿ ಕಡಿಮೆಯಾಗಿಲ್ಲ.
ಸದ್ಯ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ್ದು ಈ ಭಾಗದ ಜನ ಭಯಭೀತರಾಗಿ ಬದುಕುವ ಪರಿಸ್ಥಿತಿ ಎದುರಾಗಿದೆ.
ತಕ್ಷಣ ಅರಣ್ಯ ಸಿಬ್ಬಂದಿಗಳು ಎಚ್ಚೆತ್ತುಕೊಂಡು ಈ ಬಗ್ಗೆ ಗಮನ ಹರಿಸಬೇಕು ಎಂಬುದು ಇಲ್ಲಿನ ಜನರ ಆಶಯವಾಗಿದೆ.
ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರು ಆಗಮಿಸಿದ್ದು, ತಕ್ಷಣ ಗಾಯಗೊಂಡ ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಯ ಸಲುವಾಗಿ ಪುತ್ತೂರಿಗೆ ಕರೆದುಕೊಂಡು ಹೋಗಲಾಗಿದೆ.