ಬಂಟ್ವಾಳ: ಹಿರಿಯ ರಾಜಕೀಯ ನೇತಾರ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಸದಾನಂದ ಮಲ್ಲಿ (82) ಬಂಟ್ವಾಳದ ಪಲ್ಲಮಜಲುವಿನಲ್ಲಿರುವ ಮನೆಯಲ್ಲಿ ಬುಧವಾರ ರಾತ್ರಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರಿ, ಪುತ್ರ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ರಾಜ್ಯದ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಸುದೀರ್ಘ ಅವಧಿಗೆ ಆಗಿನ ಬಂಟ್ವಾಳ ಪಟ್ಟಣ ಪಂಚಾಯತ್ ಈಗಿನ ಪುರಸಭೆಯ ಸದಸ್ಯರಾಗಿದ್ದ ಅವರು ಬಂಟ್ವಾಳ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ, ಪುರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಸಹಿತ ಹಲವು ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಸದಾನಂದ ಮಲ್ಲಿ ಜಿಲ್ಲಾ ಪಂಚಾಯತ್ ಗೆ ನೀರುಮಾರ್ಗ ಕ್ಷೇತ್ರದಿಂದ ಸ್ಪರ್ಧಿಸಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.