DAKSHINA KANNADA
ಉರ್ವ ಪೊಲೀಸರ ಮೇಲೆ ಹಲ್ಲೆ: ಪ್ರಕರಣ ದಾಖಲು
ಮಂಗಳೂರು: ಉರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬಂದಿದ್ದವರು ಮಹಿಳಾ ಪೊಲೀಸ್ ಸೇರಿದಂತೆ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ನಿನ್ನೆ ನಡೆದಿದೆ.
ಮಂಗಳೂರಿನ ಉರ್ವ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೂಜಾ ಹಿರೇಮಠ ಮತ್ತು ಹೆಡ್ ಕಾನ್ಸ್ಟೇಬಲ್ ನಾರಾಯಣ ಎಂಬುವವರು ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಘಟನೆ ವಿವರ
ಮಂಗಳೂರಿನ ಅಪಾರ್ಟ್ಮೆಂಟ್ವೊಂದರಲ್ಲಿ ಇತ್ತೀಚೆಗೆ ನಿರ್ವಹಣಾ ವೆಚ್ಚ ನೀಡಲಿಲ್ಲವೆಂದು ಅಲ್ಲಿನ ನಿವಾಸಿಗಳಿಗೆ ನೀರಿನ ಸಂಪರ್ಕ ಕಡಿತಗೊಳಿಸಿರುವುದನ್ನು ವಿಚಾರಿಸಲು ಹೋದ ಅಪ್ರಾಪ್ತ ಬಾಲಕಿಗೆ ಕಿರುಕುಳ ಸೇರಿದಂತೆ ಹಲ್ಲೆ ಪ್ರಕರಣ ದಾಖಲಾಗಿತ್ತು. ಈ ಘಟನೆ ಬಳಿಕ ಅಪಾರ್ಟ್ಮೆಂಟ್ನ ಮನೆಯವರಿಗೆ ನೀರಿನ ಸಂಪರ್ಕ ನೀಡಿ ರಾಜಿ ಪಂಚಾಯ್ತಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ದಾಖಲಾದ ಪ್ರಕರಣ ವಾಪಸ್ ಪಡೆಯಲು ಜಾನ್ ಸಿಕ್ವೆರ್, ನೋವೆಲ್ ಸಿಕ್ವೆರ್ ಮತ್ತು ಅವರ ಮಗಳು, ಡಿಸಿಪಿಯನ್ನು ಭೇಟಿಯಾಗಿದ್ದರು. ಪ್ರಕರಣವನ್ನ ಠಾಣೆಯಲ್ಲಿ ಇತ್ಯರ್ಥ ಮಾಡುವಂತೆ ಸೂಚಿಸಿದ್ದರು. ಅದರಂತೆ ಉರ್ವ ಠಾಣೆಗೆ ಮೂವರು ಹೋಗಿದ್ದರು. ಪೊಲೀಸರ ಜತೆಗೆ ಮಾತನಾಡುವಾಗ ವಿಡಿಯೋ ರೆಕಾರ್ಡ್ ಮಾಡಲು ಯತ್ನಿಸುತ್ತಿದ್ದರು. ಇದನ್ನು ಪ್ರಶ್ನಿಸಿದಕ್ಕೆ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಇಬ್ಬರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ವೆನ್ಲಾಕ್ಗೆ ಭೇಟಿ ಮಾಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಹಲ್ಲೆ ಮಾಡಿದ ಇಬ್ಬರನ್ನು ಉರ್ವ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
DAKSHINA KANNADA
ಮಂಗಳೂರು: 14.33% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 14.33 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.
DAKSHINA KANNADA
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.
ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.