ಮಂಗಳೂರು: ಕರಾವಳಿಯಲ್ಲಿ ಇನ್ನೂ ಮೂರು ದಿನ ಉತ್ತಮ ಮಳೆಯಾಗಲಿದ್ದು ಇಂದು ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ನಿನ್ನೆಯಿಂದಲೇ ನಗರ ಪ್ರದೇಶಗಳಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು ಉತ್ತಮ ಮಳೆಯಾಗಿದೆ. ಇಂದು ರೆಡ್ ಅಲರ್ಟ್ ಘೋಷಿಸಿದ್ದರೆ ಬಳಿಕ 3 ದಿನಗಳ ಕಾಲ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಇರಲಿದೆ.
ಬುಧವಾರ ಗ್ರಾಮೀಣ ಭಾಗವಾದ ಮೂಡುಬಿದಿರೆ, ಕಿನ್ನಿಗೋಳಿ ಸೇರಿದಂತೆ ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳದಲ್ಲಿ ಮಳೆಯಿಂದಾಗಿ ಹಲವೆಡೆ ಮರಗಳು ವಿದ್ಯುತ್ ಕಂಬದ ಮೇಲೆ ಮುರಿದು ಬಿದ್ದಿದ್ದು ಸಂಚಾರಕ್ಕೂ ಅಡ್ಡಿಯಾಗಿದೆ. ಮಂಗಳೂರಿನಲ್ಲಿ ಹವಾಮಾನ ಕನಿಷ್ಠ 23.9 ಡಿಗ್ರಿ ಸೆಲ್ಸಿಯಸ್ ಇದ್ದರೆ ಗರಿಷ್ಠ 28.5 ಡಿಗ್ರಿ ಸೆಲ್ಸಿಯಸ್ ಇತ್ತು.