ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.
ಪ್ರಸ್ತುತ ಸ್ಥಿತಿಯಲ್ಲಿ ಇಡೀ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ ತೊಂದರೆಯಾಗಲಿದೆ. ಈ ಕಾರಣದಿಂದ ಯಾವ ಶಾಲೆಗಳಲ್ಲಿ ಪಾಸಿಟಿವ್ ಸಂಖ್ಯೆ ಹೆಚ್ಚು ಕಂಡು ಬಂದಿದೆಯೋ ಆ ಶಾಲೆಗಳನ್ನು ಮಾತ್ರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬಹುದು ಎಂಬ ಅಭಿಪ್ರಾಯ ಅಧಿಕಾರಿಗಳು, ಆಡಳಿತ ಮಂಡಳಿಯಿಂದ ವ್ಯಕ್ತವಾಯಿತು.
ಶಾಲೆಗಳಲ್ಲಿ 10ಕ್ಕಿಂತ ಹೆಚ್ಚು ಪ್ರಕರಣವಿದ್ದರೆ ಆ ಶಾಲೆಗಳನ್ನು ಬಂದ್ ಮಾಡಲು ರಾಜ್ಯ ಸರಕಾರದ ಆದೇಶವಿದೆ. ಆದರೆ ದ.ಕ. ಜಿಲ್ಲೆಯಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಕಂಡು ಬಂದರೆ ಶಾಲೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ನಡೆಸಲು ಅವಕಾಶ ನೀಡಲಾಗಿದೆ.
ಒಂದು ವಾರದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡಲಾಗುವುದು ಎಂದು ಡಾ ಕೆವಿ ರಾಜೇಂದ್ರ ತಿಳಿಸಿದ್ದಾರೆ.