ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಇನ್ನೊಂದೆಡೆ ಪೊಲೀಸರು ಬಂದೋಬಸ್ತು ಬಿಗಿಗೊಳಿಸಿದ್ದಾರೆ.
ಯಾವುದೇ ಸಂಭಾವ್ಯ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಕಣ್ಗಾವಲು ಇರಿಸಿದ್ದಾರೆ. ಜಿಲ್ಲಾದ್ಯಂತ ಪ್ರಮುಖ ರಸ್ತೆಗಳ ಜಂಕ್ಷನ್‌ಗಳಲ್ಲಿ ಮತ್ತು ಆಯಕಟ್ಟಿನ ಜಾಗಗಳಲ್ಲಿ ರಾತ್ರಿ ವೇಳೆ ಬ್ಯಾರಿಕೇಡ್‌ಗಳನ್ನು ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.
ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಬಗ್ಗೆ ಗುಪ್ತಚರ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ರ ತಲಪಾಡಿ ಗಡಿಯಲ್ಲಿ ರಾತ್ರಿ ಹಗಲೆನ್ನದೆ ದಿನದ 24 ಗಂಟೆ ಕಾಲವೂ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.
ಸುಳ್ಯ, ಪುತ್ತೂರು ತಾಲೂಕುಗಳ ಗಡಿ ಭಾಗದ ರಸ್ತೆಗಳಲ್ಲಿಯೂ ಇದೇ ರೀತಿಯ ಕಾರ್ಯಾಚರಣೆ ನಡೆಯುತ್ತಿದೆ. ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಕೂಡಾ ಹೈ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ನಗರದಲ್ಲಿ ರಾತ್ರಿ ಹೊತ್ತಿನಲ್ಲಿ ವಾಹನಗಳನ್ನು ತಪಾಸಣೆ ಮಾಡುವುದರ ಜತೆಗೆ ಪ್ರತಿಯೋರ್ವ ಪ್ರಯಾಣಿಕರ ಬ್ಯಾಗುಗಳನ್ನು ಶೋಧಿಸಿ ಬಿಡಲಾಗುತ್ತಿದೆ. ಸುಳ್ಳು ಸಂದೇಶಗಳನ್ನು ಹರಡುವ ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ಹದ್ದಿನ ಕಣ್ಣಿರಿಸಿದ್ದಾರೆ.