ಮಂಗಳೂರು: ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಪಾದಾರ್ಪಣೆ ಮಾಡಿ ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಶೀರ್ಷಿಕೆಯಲ್ಲಿಯೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟ್ರೇಲರ್ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಅನಾವಣಗೊಂಡಿದೆ. ಚಿತ್ರದ ಟ್ರೈಲರ್ A2 Films ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿ ಜನರಿಂದ ಅದ್ಭುತ ಪ್ರತಿಕ್ರಿಯೆ ದೊರಕಿದೆ .
ಹಿಮಾನಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಕಲ್ಜಿಗ ಚಿತ್ರವನ್ನು ಸುಮನ್ ಸುವರ್ಣ ನಿರ್ದೇಶನ ಮಾಡಿದ್ದಾರೆ. ಶರತ್ ಕುಮಾರ್ ಎ.ಕೆ ನಿರ್ಮಾಣದ ಕಲ್ಜಿಗ ಚಿತ್ರದ ಕಥೆ ಚಿತ್ರಕಥೆ ಸಂಭಾಷಣೆಯನ್ನು ಕೂಡ ನಿರ್ದೇಶಕರೇ ಬರೆದಿದ್ದಾರೆ.
ಸಿನೆಮಾಕ್ಕೆ ನಾದಬ್ರಹ್ಮ ಹಂಸಲೇಖರವರ ಸಂಗೀತ ನಿರ್ದೇಶನ:
ಬಹು ಕಾಲದ ನಂತರ ನಾದಬ್ರಹ್ಮ ಹಂಸಲೇಖ ಈ ಸಿನಿಮಾ ಮೂಲಕ ಸಂಗೀತ ನಿರ್ದೇಶನಕ್ಕೆ ಮರಳಿದ್ದಾರೆ. ಇನ್ನುಳಿದಂತೆ ಗಿರ್ಗಿಟ್, ಸರ್ಕಸ್, ಗಮ್ಜಾಲ್ ಮುಂತಾದ ಚಿತ್ರಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಸುಮನ್ ಸುವರ್ಣ `ಕಲ್ಜಿಗ’ದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ತುಳು ಚಿತ್ರರಂಗದ ಕಿಂಗ್ ಆಫ್ ಆಕ್ಷನ್ ಅರ್ಜುನ್ ಕಾಪಿಕಾಡ್ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಅಪ್ಪಟ ಕನ್ನಡತಿ ಸುಶ್ಮಿತಾ ಭಟ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಎಸ್. ಕೆ ಗ್ರೂಪ್ ಎಂಬ ಮಾರ್ಕೆಟಿಂಗ್ ಸಂಸ್ಥೆಯ ಮಾಲೀಕ ಶರತ್ ಕುಮಾರ್ ಎ.ಕೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಟರಾದ ಗೋಪಿನಾಥ್ ಭಟ್ , ಜ್ಯೋತಿಷ್ ಶೆಟ್ಟಿ , ಮಾನಸಿ ಸುಧೀರ್ , ವಿಜಯ್ ಶೋಭರಾಜ್ ಪಾವೂರ್ , ಶ್ಲಾಘಾ ಸಾಲಿಗ್ರಾಮ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಹಿನ್ನೆಲೆ ಸಂಗೀತವನ್ನು ಪ್ರಸಾದ್ ಕೆ ಶೆಟ್ಟಿಯವರು ನೀಡಿದ್ದಾರೆ.
ಮಂಗಳೂರು , ಉಡುಪಿ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸೆಪ್ಟಂಬರ್ 13 ರಂದು ಕಲ್ಜಿಗ ದಕ್ಷಿಣ ಕನ್ನಡ , ಉಡುಪಿ , ಬೆಂಗಳೂರು , ಮೈಸೂರು , ಶಿವಮೊಗ್ಗ , ಚಿಕ್ಕಮಗಳೂರು , ಹಾಸನ , ಮಡಿಕೇರಿ , ಹುಬ್ಬಳ್ಳಿ , ಧಾರವಾಡ , ದಾವಣಗೆ ಮುಂಬೈ ಹಾಗೂ ಗಲ್ಫ್ ದೇಶಗಳಲ್ಲಿ ಬಿಡುಗಡೆಯಾಗಲಿದೆ.
14 ಲಕ್ಷಕ್ಕಿಂತಲೂ ಹೆಚ್ಚು ಜನರಿಂದ ಟ್ರೈಲರ್ ವೀಕ್ಷಣೆ:
ಈಗಾಗಲೇ ಕಲ್ಜಿಗ ಚಿತ್ರದ ಟ್ರೈಲರ್ ಅನ್ನು ಯೂಟ್ಯೂಬ್ ನಲ್ಲಿ ಒಟ್ಟು 14 ಲಕ್ಷಕ್ಕಿಂತಲೂ ಹೆಚ್ಚು ಜನರು ವೀಕ್ಷಿಸಿದ್ದಾರೆ ಮಂಗಳೂರು ಸೀಮೆಯ ಕನ್ನಡ ಭಾಷಾ ಶೈಲಿಯಲ್ಲಿ ಚಿತ್ರ ತಯಾರಾಗಿದೆ. ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ನಂತರದಲ್ಲಿ ಘಟಿಸುವ ರೋಚಕ ಕಥನ ಕಲ್ಜಿಗದಲ್ಲಿದೆ. ಸಚಿನ್ ಶೆಟ್ಟಿ ಛಾಯಾಗ್ರಹಣ , ಯಶ್ವಿನ್ ಕೆ ಶೆಟ್ಟಿಗಾರ್ ಸಂಕಲನ ಈ ಚಿತ್ರಕ್ಕಿದೆ. ಕಾಂತಾರ ಖ್ಯಾತಿಯ ಸನೀಲ್ ಗುರು ಕ್ರಿಯೇಟಿವ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ರಾಧಾಕೃಷ್ಣ ಮಾಣಿಲ , ಪ್ರೊಡಕ್ಷನ್ ಮ್ಯಾನೇಜರ್ ಆಗಿ ಸಂದೀಪ್ ಶೆಟ್ಟಿ `ಕಲ್ಜಿಗ’ಕ್ಕೆ ಕೈ ಜೋಡಿಸಿದ್ದಾರೆ.