ಬೆಂಗಳೂರು: ವಿವಾದಿತ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ನಿರ್ಧಾರ ಮಾಡಿದೆ.
ಬಲವಂತದ ಮತಾಂತರವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ವಿಧಾನಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆಯೂ ಸಿಕ್ಕಿತ್ತು.
ಅಧಿವೇಶನದ ಕೊನೆಯ ದಿನ ವಿಧಾನ ಪರಿಷತ್‌ನಲ್ಲಿ ವಿಧೇಯಕವನ್ನು ಮಂಡಿಸುವ ಮೂಲಕ ಅಂಗೀಕಾರ ಪಡೆದುಕೊಳ್ಳುವ ಚಿಂತನೆಯನ್ನು ಸರ್ಕಾರ ನಡೆಸಿದ್ದರೂ
ಅದು ಸಂಖ್ಯಾ ಬಲದ ಕಾರಣಕ್ಕಾಗಿ ಸಾಧ್ಯವಾಗಿರಲಿಲ್ಲ. ಈ ಕಾರಣಕ್ಕಾಗಿ ಪರಿಷತ್‌ನಲ್ಲಿ ಮಸೂದೆಯನ್ನು ಮಂಡಿಸಲು ಮುಂದಾಗಿರಲಿಲ್ಲ.
ಇದೀಗ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಮಸೂದೆಗೆ ಸುಗ್ರೀವಾಜ್ಞೆ ಮೂಲಕ ಅನುಮೋದನೆ ನೀಡಿ, ಅಧ್ಯಾದೇಶದ ಮೂಲಕ ರಾಜ್ಯಪಾಲರಿಗೆ ರವಾನಿಸಲು ನಿರ್ಧಾರ ಮಾಡಲಾಗಿದೆ.