ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ನಂತೆ ಪ್ರಸಿದ್ದಿ ಪಡೆಯಬೇಕು ಎಂಬ ಉದ್ದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದೇನೆ ಎಂದು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿ ಬಂಧಿತನಾಗಿದ್ದ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಏರ್ ಪೋರ್ಟ್ ಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಉಡುಪಿಯ ಕಾರ್ಕಳ ತಾಲೂಕು ಮುದ್ರಾಡಿಯ ವಸಂತ ಕೃಷ್ಣ ಶೇರಿಗಾರ (33) ಈಗಾಗಲೇ ಬಂಧಿಸಲಾಗಿದ್ದು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆತನನ್ನು ಕೋವಿಡ್ ಸೋಂಕು ಪರೀಕ್ಷೆ ನಡೆಸಬೇಕಾಗಿರುವುದರಿಂದ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಪರೀಕ್ಷಾ ವರದಿ ನೆಗೆಟಿವ್ ಬಂದರೆ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಪಡೆಯಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು” ಎಂದು ಹೇಳಿದ್ದಾರೆ.
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿ ಕೇವಲ ಪ್ರಚಾರಕ್ಕಾಗಿ ತಾನು ಈ ಕೃತ್ಯ ಎಸಗಿರುವುದಾಗಿ ಪೋಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ತನ್ನ ಪ್ರಚಾರದ ಹುಚ್ಚಿಗೆ ಈತ ಇದೀಗ ಜೈಲಿನ ಕಂಬಿ ಎಣಿಸಲು ಆರಂಭಿಸಿದ್ದಾನೆ.
ಪ್ರಚಾರ ಗಳಿಸುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದಾಗಿ ಹೇಳಿಕೊಂಡಿದ್ದಾನೆ. ಜನವರಿ ತಿಂಗಳಿನಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಎನ್ನುವ ವ್ಯಕ್ತಿ ಸ್ಪೋಟಕವೊಂದನ್ನು ಇರಿಸಿ ದೇಶ ಹಾಗೂ ವಿದೇಶಗಳಲ್ಲಿ ಒಂದೇ ದಿನದಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದ್ದ. ಇದನ್ನೇ ರೋಲ್ ಮಾಡಲ್ ಆಗಿ ತೆಗೆದುಕೊಂಡ ಆರೋಪಿ ವಸಂತ್ ಗೂಗಲ್ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಂಬರ್ ಹುಡುಕಿದ್ದಾನೆ. ಕೇವಲ 8 ನೇ ತರಗತಿ ಕಲಿತಿರುವ ಈತನಿಗೆ ಗೂಗಲ್ ನಲ್ಲಿ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರಾದ ವಾಸುದೇವ್ ರಾವ್ ನಂಬರ್ ಸಿಕ್ಕಿದೆ. ಅವರನ್ನೇ ನಿಲ್ದಾಣದ ನಿರ್ದೇಶಕರು ಎಂದು ತಿಳಿದು ಆತ ಬೆದರಿಕೆಯ ಕರೆ ಮಾಡಿದ್ದಾನೆ.
ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ, ಹಾಗೂ ಇತರ ಸೆಕ್ಷನ್ ಮೂಲಕ ಆರೋಪಿಯನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ. ಜಾಮೀನುರಹಿತ ಸೆಕ್ಷನ್ ಮೇಲೆ ಆರೋಪಿಯನ್ನು ಬಂಧಿಸಿರುವ ಪೋಲೀಸರು ಇನ್ನಷ್ಟು ವಿಚಾರಣೆ ನಡೆಸುತ್ತಿದ್ದಾರೆ.