DAKSHINA KANNADA
Mangalore: ರ‍್ಯಾಂಕ್ ವಿಜೇತ ವೈದ್ಯೆಗೆ ಸನ್ಮಾನ
ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ನಡೆಸಿದ ಎಂಬಿಬಿಎಸ್ ಪದವಿಯಲ್ಲಿ ಫಿಸಿಯೋಲಜಿ ವಿಷಯದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮುಕ್ಕ ಶ್ರೀನಿವಾಸ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಡಾ. ಮೈತ್ರಿ ಅವರನ್ನು ಶಿವಳ್ಳಿ ಸ್ಪಂದನ ಕದ್ರಿ ವಲಯ ವತಿಯಿಂದ ಸನ್ಮಾನಿಸಲಾಯಿತು.
ಮಂಗಳೂರು: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ನಡೆಸಿದ ಎಂಬಿಬಿಎಸ್ ಪದವಿಯಲ್ಲಿ ಫಿಸಿಯೋಲಜಿ ವಿಷಯದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮುಕ್ಕ ಶ್ರೀನಿವಾಸ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಡಾ. ಮೈತ್ರಿ ಅವರನ್ನು ಶಿವಳ್ಳಿ ಸ್ಪಂದನ ಕದ್ರಿ ವಲಯ ವತಿಯಿಂದ ಸನ್ಮಾನಿಸಲಾಯಿತು.
ಕದ್ರಿ ವಲಯಾಧ್ಯಕ್ಷ ರಾಮಚಂದ್ರ ಭಟ್ ಎಲ್ಲೂರು, ಮಹಿಳಾ ಘಟಕಾಧ್ಯಕ್ಷೆ ರಮಾಮಣಿ ಭಟ್, ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಪೊಳಲಿ ಗಿರಿಪ್ರಕಾಶ್ ತಂತ್ರಿ, ಪದಾಧಿಕಾರಿಗಳಾದ ಸುಧಾಕರ ಭಟ್ ಆರೂರು, ಗೀತಾ ಬೆಳ್ಳೆ, ಸುಧಾ ಪ್ರಸಾದ್, ಜಯಲಕ್ಷ್ಮೀ ರಾವ್, ಸದಾನಂದ ಪೇಜಾವರ, ಉಮಾಲತಾ ಜಿ.ತಂತ್ರಿ, ಹೆತ್ತವರಾದ ರಾಜೇಂದ್ರ, ಸಂಧ್ಯಾ ಮತ್ತು ಅಜ್ಜ ವಿಠಲದಾಸ ರಾವ್, ಅಜ್ಜಿ ಲೀಲಾ ವಿ.ರಾವ್ ಉಪಸ್ಥಿತರಿದ್ದರು.
BELTHANGADY
ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು- ಕಳ್ಳ ಅರೆಸ್ಟ್..!
ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ನಿವಾಸಿ ಉಮೇಶ್ ಬಳೇಗಾರ್(47) ಬಂಧಿತ ಆರೋಪಿ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅಜಿತ್ ನಗರ ಕೆಲ್ಲೆ ನಿವಾಸಿ ಫೆಲಿಕ್ಸ್ ರೋಡ್ರಿಗಸ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಮನೆಯ ಬಾಗಿಲು ಮುರಿದು ನುಗ್ಗಿ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಆಗಿದೆ.
ಈ ಕೂಡಲೇ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
ಆರೋಪಿ ವಿರುದ್ಧ ತಮಿಳುನಾಡು, ಕೇರಳದ ವಿವಿಧ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಿಸಲಾಗಿದೆ.
ಅಲ್ಲದೆ ಕರ್ನಾಟಕದ ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡಬಿದ್ರೆ ಠಾಣೆಯಲ್ಲಿಯೂ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ.
ಈತನಿಗಾಗಿ ಮೂರೂ ರಾಜ್ಯಗಳ ಪೊಲೀಸರು ಹುಡುಕಾಟ ನಡೆಸುತ್ತಿರುವಾಗಲೇ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈತನಿಂದ ಕಳ್ಳತನ ಮಾಡಲಾದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
DAKSHINA KANNADA
ಜಾನುವಾರು ಸಾಗಾಟಗಾರರ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ..!
ಮಂಗಳೂರು: ಜಾನುವಾರು ಅಕ್ರಮ ಸಾಗಾಟದ ತಂಡವೊಂದರ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ.
ಫರಂಗಿಪೇಟೆ ಸಮೀಪದ ಅಮೆಮಾರ್‌ನ ನಿವಾಸಿಗಳು ತಸ್ಲೀಮ್ ಯಾನೆ ಗರುಡ ತಸ್ಲೀಮ್ (34) ಮತ್ತು ಹೈದರಾಲಿ ಯಾನೆ ಹೈದು (26) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಗುರುವಾರದಂದು ತಸ್ಲೀಮ್ ಮತ್ತು ಆತನ ಗುಂಪಿನ ಸದಸ್ಯರು ಇನ್ನೊಂದು ತಂಡದ ಕೊಲೆಗೆ ಸಂಚು ರೂಪಿಸಿ ತಲವಾರಿನೊಂದಿಗೆ ಹೊಂಚು ಹಾಕುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಕೊಲೆ ಸಂಚನ್ನು ವಿಫಲಗೊಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಆರೋಪಿಗಳ ಪೈಕಿ ತಸ್ಲೀಮ್ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣ ಗಳು, ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಹಿತ 14 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಈತನು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ.
ಇನ್ನೋರ್ವ ಆರೋಪಿ ಹೈದರಾಲಿಯು ಈ ಹಿಂದೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣ ಹಾಗೂ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.