ನವದೆಹಲಿ: ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಇಬ್ಬರು ದಾರುಣವಾಗಿ ಸಾವಿಗೀಡಾದ ಘಟನೆ ದೆಹಲಿಯ ನರೇಲಾದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ 9.35ರ ಸುಮಾರಿಗೆ ಅಗ್ನಿ ಅವಘಡ ನಡೆದಿದೆ ಎಂದು ಶಂಕಿಸಲಾಗಿದೆ.
ಘಟನೆಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದೆ. ಇನ್ನು ಅವಘಡದಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಮೃತರನ್ನು 30 ರಿಂದ 35 ವರ್ಷ ವಯಸ್ಸಿನವರೆಂದು ಗುರುತಿಸಲಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ.
ಕೂಡಲೇ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡವು. ಆದರೂ 2 ರಿಂದ ಮೂವರು ಕಟ್ಟಡದ ಒಳಗೆ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಗ್ನಿ ಅವಘಡದಲ್ಲಿ ಗಾಯಗೊಂಡವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಸದ್ಯ ಅವರ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಮಾತನಾಡಿ, ಕೆಲವರು ದಟ್ಟ ಹೊಗೆಯಿಂದ ಹೊರಗೆ ಬರಲಾರದೆ ಒಳಗಡೆ ಸಿಲುಕಿದ್ದಾರೆ ಎಂದು ಶಂಕಿಸಿದ್ದಾರೆ.
ಅಗ್ನಿ ದುರಂತಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.