ಮಂಗಳೂರು: ಮಂಗಳೂರಿನ ಪಣಂಬೂರು ಕಡಲ ತೀರದಲ್ಲಿ ಮೇ 27ರಿಂದ 29ರವರೆಗೆ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್ ಆಯೋಜನೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ‘ಬಹುದೊಡ್ಡ ಮಟ್ಟದಲ್ಲಿ ನಡೆಯಲಿರುವ ಸರ್ಫಿಂಗ್ ಚಾಂಪಿಯನ್‌ಶಿಪ್ ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಮಂತ್ರ ಸರ್ಫ್ ಕ್ಲಬ್ ಸಹಭಾಗಿತ್ವದಲ್ಲಿ ನಡೆಯಲಿದೆ.
ಪ್ರವಾಸೋದ್ಯಮ ಇಲಾಖೆಯಿಂದ ‘ಇಂಡಿಯನ್ ಓಪನ್ ಆಫ್ ಸರ್ಫಿಂಗ್-2022’ಕ್ಕೆ 15 ಲಕ್ಷ ರೂ. ಗಳ ಪ್ರಾಯೋಜಕತ್ವವನ್ನು ನೀಡಲಾಗಿದೆ.
70ಕ್ಕೂ ಹೆಚ್ಚು ಕ್ರೀಡಾಪಟುಗಳು ಕರ್ನಾಟಕ ಹಾಗೂ ಬೇರೆ ರಾಜ್ಯಗಳಿಂದ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.
ಇನ್ನು ಇದೇ ವೇಳೆ ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಗೌರವ್ ಹೆಗ್ಡೆ ಮಾತನಾಡಿ ‘2017 ರಲ್ಲಿ ನಡೆದ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಬಳಿಕ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ಸರ್ಫಿಂಗ್ ಟೂರಿಸಂ 20 ಪಟ್ಟು ಅಭಿವೃದ್ಧಿಯಾಗಿದೆ’ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಮಂಗಳ ಸರ್ಫಿಂಗ್ ಕ್ಲಬ್ ನ ರಾಮ್ ಮೋಹನ್ ಉಪಸ್ಥಿತರಿದ್ದರು.