ಕಡಬ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇಂದು ಮುಂಜಾನೆ ಉಪ್ಪಿನಂಗಡಿ ಮತ್ತು ಸುಳ್ಯದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು.
ಬೆಳ್ಳಾರೆ ಗ್ರಾಮಪಂಚಾಯಿತಿ ಸದಸ್ಯ ಇನ್ಸಾಲ್, ಸುಳ್ಯದ ಇಬ್ರಾಹಿಂ, ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಒಟ್ಟು ಮೂವರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಇನ್ನು ಲುಕ್‌ಔಟ್ ಜಾರಿಯಾಗಿರುವ ನಾಲ್ವರ ಪತ್ತೆಗಾಗಿ ಪುತ್ತೂರು, ಸುಳ್ಯ, ಬೆಳ್ಳಾರೆ ಸಹಿತ ಹಲವೆಡೆ ಬಸ್ ನಿಲ್ದಾಣ, ರೈಲು ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಆರೋಪಿಗಳ ಭಾವಚಿತ್ರ ಇರುವ ಪೋಸ್ಟರ್ ಅಂಟಿಸಿ ಪತ್ತೆಗೆ ಸಹಕರಿಸಲು ಮನವಿ ಮಾಡಿದ್ದಾರೆ.
ಎನ್‌ಐಎಯ 6 ಜನರ ತಂಡವು ತಂತ್ರಜ್ಞಾನ ಆಧಾರಿತ ಮಾಹಿತಿ ಆಧಾರದಲ್ಲಿ ಪುತ್ತೂರು ಸುತ್ತಮುತ್ತ ಶೋಧ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಎರಡು ದಿನಗಳ ಹಿಂದೆಯೂ ಜಿಲ್ಲೆಯ ಹಲವು ಕಡೆಗಳಲ್ಲಿ ಪಿಎಫ್‌ಐ ಮುಖಂಡರ ಮನೆ ಮೇಲೆ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳ ತಂಡ ಪರಿಶೀಲನೆಯನ್ನು ನಡೆಸಿ ದಾಖಲೆಗಳನ್ನು ಪಡೆದುಕೊಂಡಿತ್ತು. ಆದರೆ ಜಿಲ್ಲಾ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲ.