DAKSHINA KANNADA
ಮಂಗಳೂರು: ಮನೆಗೆ ನುಗ್ಗಿ ಒಂದೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾದ ಖದೀಮರು
ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಕಬೈಲು ನಿವಾಸಿ ಶಿವಸುಬ್ರಹ್ಮಣ್ಯ ಪ್ರಸಾದ್ ಎಂಬವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗವನ್ನು ಮುರಿದ ಕಳ್ಳರು ಒಳಗೆ ಪ್ರವೇಶಿಸಿ ಬೆಡ್ ರೂಮಿನ ಒಳಗಡೆ ಇದ್ದ ಕಪಾಟಿನ ಬಾಗಿಲನ್ನು ಮುರಿದು ಜಾಲಾಡಿದ್ದಾರೆ.
ಕಪಾಟಿನ ಒಳಗಡೆ ಇದ್ದ 1 ಚಿನ್ನದ ಬಳೆ, 3 ಚಿನ್ನದ ಉಂಗುರ ಕಿವಿಯೋಲೆ ಸಹಿತ ಒಟ್ಟು 32 ಗ್ರಾಂ ಚಿನ್ನಾಭರಣ, ಕಳವು ಮಾಡಿದ್ದಾರೆ. ಕಳವಾದ ಚಿನ್ನಾಭರಣಗಳ ಮೌಲ್ಯ 1,10,000 ರೂ. ಎಂದು ಅಂದಾಜಿಸಲಾಗಿದೆ.
ಅಲ್ಲದೇ 10 ಸಾವಿರ ಮೌಲ್ಯದ ಬೆಳ್ಳಿಯ 8 ಕ್ವಾಯಿನ್ ಗಳು. 3 ವಾಚುಗಳು ಹಾಗೂ ನಗದು ಹಣ ರೂ.11,000 ರೂ.ಗಳನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿದ್ದಾರೆ.
ಕಳವಾದ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ರೂ.1,49,000 ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಶಿವಸುಬ್ರಹ್ಮಣ್ಯ ಪ್ರಸಾದ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮಂಗಳೂರು: 14.33% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 14.33 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.
DAKSHINA KANNADA
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.
ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.