ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೊಕ್ಸೋ ಕಾಯ್ದೆಯಡಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ.
ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದು, ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದಳೆನ್ನಲಾಗಿದೆ.
ವಿದ್ಯಾರ್ಥಿನಿಯ ಪೋಷಕರು ಸಂಸ್ಥೆಗೆ ಬಂದು ವಿಚಾರಿಸಿ ಬಳಿಕ ಅ.25ರಂದು ಸಂಜೆ ಘಟನೆಯ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ವಿದ್ಯಾರ್ಥಿನಿ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ಪುತ್ತೂರು ಕ್ಲಬ್ ಬಳಿ ಬಂಧಿಸಲಾಗಿದೆ
ಬಂಧಿತ ಆರೋಪಿಯನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.