ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವೈವಿಧ್ಯಮಯ ಯೋಜನೆಗಳನ್ನು ಕಾರ್ಯಗತಗೊಳಿಸಿ, ಆಧುನಿಕ ಬ್ಯಾಂಕಿಂಗ್ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿದೆ.
ಸಮಸ್ತ ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಜನ ಮನ್ನಣೆ ಗಳಿಸಿಕೊಂಡಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಜನಸ್ನೇಹಿ ಬ್ಯಾಂಕ್ ಎನ್ನುವ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ.
2021-22ನೇ ಸಾಲಿನಲ್ಲಿ ಬ್ಯಾಂಕ್ ಸಾರ್ವಕಾಲಿಕ ಗರಿಷ್ಠ 50.49 ಕೋಟಿ ರೂ. ಲಾಭ ಗಳಿಸಿ ತನ್ನ ಸದಸ್ಯ ಸಂಘಗಳಿಗೆ ಶೇ. 8 ಡಿವಿಡೆಂಡ್‌ನ್ನು ಘೋಷಿಸಲಾಗಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಭಾಭವನದಲ್ಲಿ ಶುಕ್ರವಾರ ನಡೆದ ಬ್ಯಾಂಕ್‌ನ 108ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ,
ಸಹಕಾರ ತತ್ವದ ಮೂಲ ಆಶಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನೆಯ 108 ವರ್ಷಗಳನ್ನು ಪೂರೈಸಿ ಅಭಿವೃದ್ಧಿಯ ಮುಂಚೂಣಿಯಲ್ಲಿದೆ.
ವರದಿ ವರ್ಷದಲ್ಲಿ ಬ್ಯಾಂಕ್ ಸಾಧಿಸಿದ ಯಶಸ್ಸು ಅಭೂತಪೂರ್ವವಾದದ್ದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ದಿನೇ ದಿನೇ ಸ್ಪರ್ಧೆಯನ್ನು ಎದುರಿಸಿದರೂ ಬ್ಯಾಂಕ್ ಅಭಿವೃದ್ಧಿಯ ಪಥವನ್ನು ಕಂಡು ದೇಶದ ಅಗ್ರಮಾನ್ಯ ಸಹಕಾರಿ ಬ್ಯಾಂಕ್ ಎನಿಸಿಕೊಂಡಿದೆ ಎಂದರು.
ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಕೋರ್ ಬ್ಯಾಂಕಿಂಗ್‌ನಂತಹ ಉನ್ನತ ಸೇವೆಯು ಬ್ಯಾಂಕಿನ 111 ಶಾಖೆಗಳಲ್ಲಿ ದೊರೆಯುತ್ತಿದೆ. ವರದಿ ವರ್ಷದಲ್ಲಿ ಮೊಬೈಲ್ ಆ್ಯಪ್, ಟ್ಯಾಬ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬ್ಯಾಂಕ್ ಗ್ರಾಹಕರಿಗೆ ಪರಿಚಯಿಸಿದೆ.
ಮುಂದಿನ ದಿನಗಳಲ್ಲಿ ಇಂಟರ್ ಬ್ಯಾಂಕಿಂಗ್ ಮೊಬೈಲ್ ಪೇಮೆಂಟ್ ಸಿಸ್ಟಮ್ ಯೋಜನೆಯನ್ನು ಹಾಗೂ ಇಂಟರ್ ಬ್ಯಾಂಕಿಂಗ್ ಸೇವೆಯನ್ನು ರೂಪಿಸಲು ಬ್ಯಾಂಕ್ ಮುಂದಾಗಿದೆ.
ಏಕರೂಪದ ತಂತ್ರಾಂಶವನ್ನು ಕಾರ್ಯರೂಪಕ್ಕೆ ತರುವ ಉದ್ದೇಶದಿಂದ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕಾಮನ್ ಸಾಫ್ಟ್‌ವೇರ್‌ನ್ನು ಅಳವಡಿಸುವ ಕಾರ್ಯಯೋಜನೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.
ಗುರಿ ಮೀರಿದ ಸಾಧನೆ
ಬ್ಯಾಂಕ್ ವರದಿ ವರ್ಷದಲ್ಲಿ ಒಟ್ಟು 11,608.04 ಕೋಟಿ ರೂ. ವ್ಯವಹಾರ ಸಾಧಿಸುವ ಮೂಲಕ ಗುರಿ ಮೀರಿದ ಸಾಧನೆಗೈದಿದೆ. ವಾಣಿಜ್ಯ ಬ್ಯಾಂಕ್‌ಗಳಲ್ಲಿ ಠೇವಣಾತಿ ಸಂಗ್ರಹಣೆಯಲ್ಲಿ ಪೈಪೋಟಿ ಇದ್ದರೂ ಬ್ಯಾಂಕ್ 111 ಶಾಖೆಗಳ ಮೂಲಕ ಒಟ್ಟು 5,651.17 ಕೋಟಿ ರೂ. ಠೇವಣಿ ಸಂಗ್ರಹಿಸಿ,
ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ರಾಜ್ಯದ ಪ್ರಥಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಕೀರ್ತಿಗೆ ಪಾತ್ರವಾಗಿದೆ. ಬ್ಯಾಂಕ್ ಆರ್ಥಿಕ ವರ್ಷದಲ್ಲಿ ಸೇವಾ ಬದ್ಧತೆ ಮೆರೆದು 4,516.63 ಕೋಟಿ ರೂ. ಮುಂಗಡ ನೀಡಿದೆ.
1031 ಸಹಕಾರಿ ಸಂಘಗಳು ಬ್ಯಾಂಕಿಗೆ ಸದಸ್ಯರಾಗಿದ್ದು ಪಾಲು ಬಂಡವಾಳ 275.98 ಕೋಟಿ ರೂ., ಬ್ಯಾಂಕಿನ ದುಡಿಯುವ ಬಂಡವಾಳ 8,668.90 ಕೋಟಿ ರೂ., ಬ್ಯಾಂಕ್ 2,30.34 ಕೋಟಿ ರೂ. ನಾನಾ ನಿಧಿಗಳನ್ನು ಹೊಂದಿದೆ ಎಂದು ಅವರು ತಿಳಿಸಿದರು.