ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಎಲ್ಲಾ ಸಚಿವರುಗಳು ತಮ್ಮ ತಮ್ಮ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ರಾಜಪಕ್ಸೆ ಅವರ ಪುತ್ರ ನಮಲ್ ರಾಜಪಕ್ಸ ಕೂಡ ಸೇರಿದ್ದಾರೆ.
ಮಹಿಂದ ರಾಜಪಕ್ಸೆ ಅವರ ರಾಜೀನಾಮೆಯ ವರದಿಗಳನ್ನು ಪ್ರಧಾನಿ ಕಚೇರಿ ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಶ್ರೀಲಂಕಾದ ಸಂಸತ್ತಿನ ಎಲ್ಲಾ ಸಚಿವರುಗಳು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಆದರೆ, ಮಹಿಂದಾ ರಾಜಪಕ್ಸೆ ಪ್ರಧಾನಿಯಾಗಿ ಮುಂದುವರೆದಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಟ್ವೀಟ್ ಮಾಡಿದ್ದ ನಮಲ್ ರಾಜಪಕ್ಸೆ ಅವರು, ಎಲ್ಲ ಖಾತೆಗಳಿಗೆ ನನ್ನ ರಾಜೀನಾಮೆಯನ್ನು ತಕ್ಷಣವೇ ಜಾರಿಗೆ ಬರುವಂತೆ ಅಧ್ಯಕ್ಷರಿಗೆ ತಿಳಿಸಿದ್ದೇನೆಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ನಿಷೇಧ
ಈ ನಡುವೆ ಅಧ್ಯಕ್ಷ ಗೋಟಬಯ ರಾಜಪಕ್ಸೆ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಶ್ರೀಲಂಕಾ ಸರ್ಕಾರ ಶನಿವಾರ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಯೂಟ್ಯೂಬ್ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಶನಿವಾರ ಸಂಜೆ 6 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ಅನ್ನು ವಿಧಿಸಲಾಗಿದೆ. ಕರ್ಫ್ಯೂ ಉಲ್ಲಂಘಿಸಿದ್ದಕ್ಕಾಗಿ ಕನಿಷ್ಠ 664 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀಲಂಕಾ ಕಳೆದೊಂದು ವಾರದಿಂದ ವಿದ್ಯುತ್ ಕಡಿತದ ಜೊತೆಗೆ ಆಹಾರ, ಇಂಧನ ಮತ್ತು ಇತರ ಅಗತ್ಯ ವಸ್ತುಗಳ ತೀವ್ರ ಕೊರತೆಯನ್ನು ಎದುರಿಸುತ್ತಿದೆ.