ತಲಪಾಡಿ ದೇವಸ್ಥಾನದ ಮುಂಭಾಗದಲ್ಲಿ ಟಿಪ್ಪರ್ ಪಲ್ಟಿ;ಅದೃಷ್ಟವಶಾತ್ ಪಾರಾದ ಮಹಿಳೆ..!
ಮಂಗಳೂರು: ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಜಾಗದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ತಲಪಾಡಿ ದೇವಿಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ.
ಈ ಸಂದರ್ಭ ದೇವಸ್ಥಾನದಿಂದ ಹೊರಬರುತ್ತಿದ್ದ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ತಲಪಾಡಿಯ ವಿಜಯಾ ಬ್ಯಾಂಕ್ ಬಳಿಯಿರುವ ನದಿಯಿಂದ ಪ್ರತೀನಿತ್ಯವೂ ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿದೆ.
ಸೋಮವಾರ ಮಧ್ಯಾಹ್ನದ ವೇಳೆಗೆ ಮುಖ್ಯ ರಸ್ತೆ ತಪ್ಪಿಸಿ ತಲಪಾಡಿಯ ಒಳ ರಸ್ತೆಯ ಮೂಲಕ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ನಿಯಂತ್ರಣ ತಪ್ಪಿ ಖಾಸಗಿ ಜಾಗದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಮಹಿಳೆಯೋರ್ವರು ಅದೃಷ್ಟವಶಾತ್ ಪಾರಾಗಿದ್ದಾರೆ. ಈ ಕುರಿತು ಸ್ಥಳೀಯರು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.
ಘಟನೆಯ ಕುರಿತು ಮಾಹಿತಿ ಸಿಕ್ಕ ತಕ್ಷಣ ಉಳ್ಳಾಲ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು ತನಿಖೆ ಮುಂದುವರಿಸಿದ್ದಾರೆ. ತಲಪಾಡಿ ದೇವಸ್ಥಾನದ ಮುಂಭಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.