ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಮುಂಗಾರು ಮಳೆ ಸುರಿತಾ ಇದ್ದು, ಕೆಲವೆಡೆ ಕೃತಕ ನೆರೆಯಾಗಿದ್ದರೆ ಹಲವು ಮನೆಗಳಿಗೆ ನೀರು ನುಗ್ಗಿದೆ.
ಜುಲೈ ದ್ವಿತೀಯಾರ್ಧದ ಮಳೆಯ ಹಿನ್ನೆಲೆಯಲ್ಲಿ ವಿವಿಧೆಡೆ ನೆರೆಹಾವಳಿ ಉಂಟಾಗಿದ್ದು, ಕಾಪು, ಮಜೂರು, ಮಠದ ಬೆಟ್ಟು, ಕಲ್ಸಂಕ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ನದಿ ತೀರದ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಉಳಿದಂತೆ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿವೆ.
ನದಿ ತೀರದಲ್ಲಿ ನೆರೆ ಹಾವಳಿಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇಂದು, ನಾಳೆ ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದ್ದು, ನಗರ ಭಾಗದಲ್ಲೂ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ನಾಳೆ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್
ಬಂಗಾಳ ಕೊಲ್ಲಿಯ ಉಪ ಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ರವಿವಾರವೂ ದ.ಕ. ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಜು.19ರಂದೂ ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮತ್ತು ಜು.20ರಿಂದ 22ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಹಾಗೂ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.