ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಮತ್ತು ಟಿಎಂಸಿ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ಕಡೆಯಿಂದ ರಾಷ್ಟ್ರಪತಿ ಹುದ್ದೆಗೆ ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ ಯಶವಂತ್ ಸಿನ್ಹಾ ಟಿಎಂಸಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದರು.
ಪ್ರತಿಪಕ್ಷಗಳ ಒಗ್ಗಟ್ಟಿನ ಸಲುವಾಗಿ ವಿಶಾಲ ತಳಹದಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡುವ ಉದ್ದೇಶದಿಂದ ತಾವು ಪಕ್ಷ ತೊರೆಯುತ್ತಿರುವುದಾಗಿ ಯಶವಂತ್ ಸಿನ್ಹಾ ತಿಳಿಸಿದ್ದರು.
ಮೂಲಗಳ ಪ್ರಕಾರ ಸಿನ್ಹಾ ಅವರನ್ನು ರಾಷ್ಟ್ರಪತಿ ಹುದ್ದೆಯ ಒಮ್ಮತದ ಅಭ್ಯರ್ಥಿಯನ್ನಾಗಿಸಲು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ.
ಒಮ್ಮೆ 1990 ರಲ್ಲಿ ಚಂದ್ರಶೇಖರ್ ಸಂಪುಟದಲ್ಲಿ ಮತ್ತು ನಂತರ ವಾಜಪೇಯಿ ಮಂತ್ರಿಮಂಡಲದಲ್ಲಿ ಸಿನ್ಹಾ ಅವರು ಎರಡು ಬಾರಿ ಕೇಂದ್ರ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಅವರು ವಾಜಪೇಯಿ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆಯನ್ನು ಸಹ ಹೊಂದಿದ್ದರು. ಜೂನ್ 15 ರಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದ್ದು,
ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದೆ. ಅಗತ್ಯವಿದ್ದಲ್ಲಿ ಜುಲೈ 18 ರಂದು ಮತದಾನ ನಡೆಯಲಿದ್ದು ಹಾಗೂ ಜುಲೈ 21 ರಂದು ಮತ ಎಣಿಕೆ ನಡೆಯಲಿದೆ.